ಇಸ್ಲಾಮಾಬಾದ್, ಮಾ27(SS): ನರೇಂದ್ರ ಮೋದಿ ಸರ್ಕಾರ ಲೋಕಸಭೆ ಚುನಾವಣೆಗೂ ಮುನ್ನ ಮತ್ತೊಂದು ದುಸ್ಸಾಹಸಕ್ಕೆ ಕೈಹಾಕುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಭಾರತ-ಪಾಕ್ ಗಡಿಯಲ್ಲಿ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಉದ್ವಿಗ್ನ ಪರಿಸ್ಥಿತಿ ಮುಂದುವರೆಯಲಿದೆ. ಲೋಕಸಭೆ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಸರ್ಕಾರ ಮತ್ತೊಂದು ದುಸ್ಸಾಹಸಕ್ಕೆ ಕೈಹಾಕುವ ಸಾಧ್ಯತೆ ಇದೆ. ಹೀಗಾಗಿ ಭಾರತ-ಪಾಕಿಸ್ತಾನ ಮೇಲೆ ಈಗಲೂ ಯುದ್ಧದ ಕಾರ್ಮೋಡ ಆವರಿಸಿದೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರ ದಾಳಿಯ ನಂತರ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಕೋಟ್ ನ ಜೈಶ್ -ಇ-ಮೊಹಮ್ಮದ್ ಉಗ್ರ ಸಂಘಟನೆಯ ಕ್ಯಾಂಪ್ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿರುವ ಬೆನ್ನಲ್ಲೇ ಪಾಕ್ ಪ್ರಧಾನಿ, ಭಾರತ ಮತ್ತೊಂದು ದುಸ್ಸಾಹಸಕ್ಕೆ ಕೈಹಾಕಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
ಅಪಾಯ ಇನ್ನೂ ಅಂತ್ಯವಾಗಿಲ್ಲ. ಪಾಕಿಸ್ತಾನ ಸಹ ಭಾರತದ ಆಕ್ರಮಣಕಾರಿ ನಡೆ ಎದುರಿಸಲು ಸಂಪೂರ್ಣ ಸಿದ್ಧವಾಗಿದೆ ಎಂದು ಪಾಕ್ ಪ್ರಧಾನಿ ಹೇಳಿರುವುದಾಗಿ ಡಾನ್ ವರದಿ ಮಾಡಿದೆ.