ಮಂಗಳೂರು, ಮೇ24(Daijiworld News/SS): ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲು ಯತ್ನಿಸಿದ್ದು ಮಾತ್ರವಲ್ಲದೆ, ತಡೆಯಲು ಬಂದ ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮತ ಎಣಿಕೆಯ ದಿನದಂದು ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಬಿಜೆಪಿ ಕಾರ್ಯಕರ್ತರ ಗುಂಪೊಂದು ಕಾಂಗ್ರೆಸ್ ಕಚೇರಿ ಎದುರು ರಸ್ತೆಯ ಮಧ್ಯದಲ್ಲೇ ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಲು ಬರುತ್ತಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ಬಂದ ಕದ್ರಿ ಠಾಣೆ ಪೊಲೀಸರು, ವಿಜಯೋತ್ಸವ ಆಚರಿಸದಂತೆ ತಡೆದಿದ್ದರು.
ಕಾಂಗ್ರೆಸ್ ಕಚೇರಿ ಎದುರು ಮತ್ತು ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸದಂತೆ ವಿಜಯೋತ್ಸವ ಆಚರಿಸದಂತೆ ಪೊಲೀಸರು ಸೂಚನೆ ನೀಡಿದ್ದನ್ನು ಗುಂಪಿನಲ್ಲಿದ್ದ ಕೆಲವರು ವಿರೋಧಿಸಿದ್ದಾರೆ. ಪೊಲೀಸ್ ಸಿಬ್ಬಂದಿಯೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಈ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಿಷೇಧಾಜ್ಞೆ ಉಲ್ಲಂಘಿಸಿರುವುದು ಮತ್ತು ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಲಾಗುವುದು ಎಂದು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.