ಉಡುಪಿ, ಆ.17(DaijiworldNews/AA): ಉಡುಪಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ನೆರವು ನೀಡುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಶಾಸಕ ಯಶಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ಕೆಎಸ್ಸಿಎ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಯಶ್ಪಾಲ್ ಸುವರ್ಣ ಅವರು, ಸ್ಥಳೀಯ ಕ್ರಿಕೆಟ್ ಪ್ರತಿಭೆಗಳಿಗೆ ಸೂಕ್ತ ಸೌಲಭ್ಯಗಳ ಕೊರತೆಯಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಉನ್ನತ ಶ್ರೇಣಿಯ ಕ್ರಿಕೆಟ್ ಕ್ರೀಡಾಂಗಣದ ಅಗತ್ಯವಿದೆ. ಉಡುಪಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸ್ಟೇಡಿಯಂ ನಿರ್ಮಿಸುವುದರಿಂದ ಈ ಭಾಗದ ಕ್ರಿಕೆಟಿಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಸ್ವಾಮ್ಯದ ಹಲವು ಜಮೀನುಗಳನ್ನು ಈಗಾಗಲೇ ಕ್ರೀಡಾಂಗಣ ಯೋಜನೆಗೆ ಮೀಸಲಿಡಲಾಗಿದೆ. ಕೆಎಸ್ಸಿಎ ಅಧ್ಯಕ್ಷರು ಶೀಘ್ರವೇ ಉಡುಪಿ ಜಿಲ್ಲೆಗೆ ಭೇಟಿ ನೀಡಿ, ಸೂಕ್ತ ಭೂಮಿ ಗುರುತಿಸಿ, ಸ್ಟೇಡಿಯಂ ನಿರ್ಮಾಣಕ್ಕೆ ಮಂಜೂರಾತಿ ನೀಡಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ವಿಶೇಷ ಬೆಂಬಲ ನೀಡುವಂತೆ ಕೇಂದ್ರ ಸರ್ಕಾರವನ್ನ ಅವರು ಮನವಿ ಮಾಡಿಕೊಂಡಿದ್ದಾರೆ. ಕ್ರೀಡಾ ಇಲಾಖೆಯು ಕ್ರೀಡಾಂಗಣಗಳು ಸೇರಿದಂತೆ ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿಗೆ ಯೋಜನೆಗಳನ್ನು ಪ್ರಾರಂಭಿಸಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಉಡುಪಿಯಲ್ಲಿ ಕ್ರೀಡಾಂಗಣ ನಿರ್ಮಾಣವನ್ನು ಈ ಯೋಜನೆಗಳಲ್ಲಿ ಸೇರಿಸಬೇಕು ಎಂದು ಮನವಿ ಮಾಡಿದರು.