ಉಡುಪಿ, ಅ.17(DaijiworldNews/AA): ಕರ್ನಾಟಕ ಸಂಭ್ರಮ 50ರ ಅಂಗವಾಗಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಚರ್ಚಿಸಲು ನಗರದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ನವೆಂಬರ್ 1 ರಂದು ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹರಕ್ಷಕ ದಳ, ಎನ್ಎಸ್ಎಸ್, ಎನ್ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪರೇಡ್ ನಡೆಯಲಿದೆ. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಮೂಹ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಗಣ್ಯರು, ಚುನಾಯಿತ ಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಗಳಲ್ಲಿ ಸಾಧನೆ ಮಾಡಿದವರನ್ನು ಔಪಚಾರಿಕ ಆಮಂತ್ರಣ ಪತ್ರಗಳೊಂದಿಗೆ ಆಹ್ವಾನಿಸಲಾಗುತ್ತದೆ. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಡಾ.ಕೆ ವಿದ್ಯಾಕುಮಾರಿ ಅವರು ಕೋರಿದರು.
ನವೆಂಬರ್ 1ರಂದು ಬೆಳಗ್ಗೆ 8 ಗಂಟೆಗೆ ಬೋರ್ಡ್ ಹೈಸ್ಕೂಲ್ನಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಕನ್ನಡ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಮೆರವಣಿಗೆಯು ಅಜ್ಜರಕಾಡು ಕ್ರೀಡಾಂಗಣಕ್ಕೆ ತೆರಳಲಿದೆ. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ತಂಡಗಳು ಕರ್ನಾಟಕದ ಇತಿಹಾಸ, ಪರಂಪರೆ ಮತ್ತು ಸಂಪ್ರದಾಯಗಳ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಮೂಡಿಸುತ್ತವೆ. ಜೊತೆಗೆ ಇಲಾಖಾ ಯೋಜನೆಗಳನ್ನು ಸಾರುವ ಟ್ಯಾಬ್ಲಾಕ್ಸ್ ಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ರಾಜ್ಯ ಸರ್ಕಾರದ ಸೂಚನೆಯಂತೆ ಕನ್ನಡ ರಾಜ್ಯೋತ್ಸವ ದಿನದಂದು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸಿದ್ಧಪಡಿಸಿರುವ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅಜ್ಜರಕಾಡು ಭುಜಂಗ ಉದ್ಯಾನವನದಲ್ಲಿ ಅಳವಡಿಸಲಾಗುವುದು ಎಂದರು.
ಕಾರ್ಯಕ್ರಮದ ಯಶಸ್ಸಿಯಾಗಿ ನೆರವೇರಲು ಹಲವಾರು ಉಪಸಮಿತಿಗಳನ್ನು ರಚಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಅವರು ಪ್ರೋತ್ಸಾಹಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯೆಲ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಹೆಗಡೆ, ಪೌರಾಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್, ಡಿಡಿಪಿಐ ಗಣಪತಿ ಕೆ, ಡಿಡಿಪಿಯು ಮಾರುತಿ ಮತ್ತು ಇತರ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.