ಬಂಟ್ವಾಳ, ಜ.08 (DaijiworldNews/AA): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಹಾಗೂ ಪ್ರಾದೇಶಿಕ ಘಟಕಗಳ ಸಹಯೋಗ ದೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ 'ಯಕ್ಷದ್ರುವ ವಿದ್ಯಾರ್ಥಿ ಸಮ್ಮಿಲನ-25' ಕಾರ್ಯಕ್ರಮವು ಬುಧವಾರ ಗಂಜಿಮಠದ ಒಡ್ಡೂರು ಫಾರ್ಮ್ ಹೌಸ್ನಲ್ಲಿ ನಡೆಯಿತು.

ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಡಾ.ಭರತ್ ಶೆಟ್ಟಿ, ದೀಪಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಯಕ್ಷಧ್ರುವ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಪ್ರಮುಖರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ದೇವದಾಸ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಯಕ್ಷಧ್ರುವ - ಯಕ್ಷಶಿಕ್ಷಣದಲ್ಲಿ ತರಬೇತಿ ಪಡೆದ ಸುಮಾರು 1000 ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ರಂಗ ಪ್ರವೇಶ ಮಾಡಿದರು. ಬಂಟ್ವಾಳ ಕ್ಷೇತ್ರದ 10 ಹಾಗೂ ಮಂಗಳೂರು ನಗರ ಉತ್ತರ ಕ್ಷೇತ್ರದ 10 ಸರಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರತ್ಯೇಕ ಪ್ರತ್ಯೇಕವಾದ ಎರಡು ರಂಗಸ್ಥಳದಲ್ಲಿ ತಮ್ಮ ಪ್ರದರ್ಶನ ನೀಡಿದರು.
ಕೀರ್ತಿಶೇಷ ಮಿಜಾರುಗುತ್ತು ಆನಂದ ಆಳ್ವ ವೇದಿಕೆಯಲ್ಲಿ ಬಂಟ್ವಾಳ ಕ್ಷೇತ್ರದ 10 ಶಾಲೆಯ ವಿದ್ಯಾರ್ಥಿಗಳು ಹಾಗೂ ಕೀರ್ತಿಶೇಷ ಡಾ. ವೈ. ಚಂದ್ರಶೇಖರ ಶೆಟ್ಟಿ ವೇದಿಕೆಯಲ್ಲಿ ಉತ್ತರ ಕ್ಷೇತ್ರದ 11 ಶಾಲೆಗಳ ವಿದ್ಯಾರ್ಥಿಗಳು ರಂಗಪ್ರವೇಶ ಮಾಡಿದರು.