ಬಂಟ್ವಾಳ, ಜ.09 (DaijiworldNews/AA): ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.