ಉಡುಪಿ,ಮಾ.19(DaijiworldNews/TA) : ಮಾ.21 ರಿಂದ ಎ.4 ರವರೆಗೆ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 14,153 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.

ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ 272 ಶಾಲೆಗಳಿಂದ ಒಟ್ಟು 7,411 ಗಂಡು ವಿದ್ಯಾರ್ಥಿಗಳು, 6,742 ಹೆಣ್ಣು ಮಕ್ಕಳು ಸೇರಿ ಒಟ್ಟು 14,153 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಪ್ರಶ್ನೆ ಪತ್ರಿಕೆ ಸಂರಕ್ಷಿಸಿಡಲು ಜಿಲ್ಲೆ ಹಾಗೂ ತಾಲೂಕುಗಳಲ್ಲಿ 2 ಪೋಲಿಸ್ ಪಹರೆ, 22 ಮಾರ್ಗಾಧಿಕಾರಿಗಳು, ಸಮರ್ಪಕ ಪೀಠಾರೋಹಣ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯ ಎಲ್ಲಾ 51 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಒ ಆರ್ ಎಸ್, ಕುಡಿಯುವ ನೀರು, ಹಾಗೂ ಪ್ರಥಮ ಚಿಕಿತ್ಸೆಗಾಗಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.