ಉಡುಪಿ, ಮಾ.23 (DaijiworldNews/AA): ನೆಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋವನ್ನು ದಾಖಲಿಸುವಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಾರ್ಚ್ ೨೨ರಂದು ತಿರಸ್ಕರಿಸಿದೆ.

ಆರೋಪಿಯು ಕೃತ್ಯಕ್ಕೆ ಬಳಸಿದ ಕಾರಿನ ಸಾಲದ ಕಂತುಗಳನ್ನು ಪಾವತಿಸದ ಕಾರಣ, ಕಾರನ್ನು ತಮ್ಮ ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ ಆದೇಶವನ್ನು ವಿಚಾರಣೆ ಮುಗಿಯುವ ವರೆಗೆ ನ್ಯಾಯಾಲಯ ಕಾಯ್ದಿರಿಸಿದೆ. ಬ್ಯಾಂಕ್ ಕಾರನ್ನು ಮಾರಾಟ ಮಾಡಿದರೆ ಸಾಕ್ಷ್ಯಗಳ ಪರಿಶೀಲನೆಗೆ ಅಡ್ಡಿಯಾಗಬಹುದು ಎಂಬುದಾಗಿ ವಿಶೇಷ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಮುಂದಿನ ವಿಚಾರಣೆಯನ್ನು ಏಪ್ರಿಲ್ 3ಕ್ಕೆ ನಿಗದಿ ಪಡಿಸಿ ನ್ಯಾಯಾಧೀಶ ಸಮಿವುಲ್ಲಾ ಆದೇಶ ನೀಡಿದರು. ಅಂದು ಸಾಕ್ಷ್ಯಗಳ ವಿಚಾರಣೆಗೆ ದಿನಾಂಕ ನಿಗದಿ ಪಡಿಸಲಾಗುತ್ತದೆ. ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರು ಜೈಲಿ ನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.