ಉಡುಪಿ, ಮಾ.27 (DaijiworldNews/AA): ಜಿಲ್ಲೆಯಲ್ಲಿ ಗುರುತಿಸಲಾದ ಕೈಗಾರಿಕಾ ಪ್ರದೇಶಗಳಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಅನುಕೂಲ ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.



ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೈಗಾರಿಕಾ ಸ್ಪಂದನಾ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿ ಸಭೆ ಮತ್ತು ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕಾಗಿ ಈಗಾಗಲೇ ವಿವಿಧ ತಾಲೂಕುಗಳಲ್ಲಿ ಜಮೀನು ಗುರುತಿಸಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಈ ಜಮೀನುಗಳನ್ನು ಸ್ವಾಧೀನಪಡಿಸಿಕೊಂಡು ವಿದ್ಯುತ್, ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆಯಂತಹ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಇದರಿಂದ ಹೊಸ ಕೈಗಾರಿಕೆಗಳು ಸ್ಥಾಪನೆಯಾಗಲು ಮತ್ತು ಜನರಿಗೆ ಉದ್ಯೋಗಾವಕಾಶಗಳು ದೊರೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕಾಗಿ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದ ೩೧.೨೮ ಎಕರೆ ಮತ್ತು ಶಿವಪುರ ಗ್ರಾಮದ 45.75 ಎಕರೆ ಖಾಸಗಿ ಜಮೀನನ್ನು ಈಗಾಗಲೇ ಸಂಪೂರ್ಣ ಪರಿಹಾರ ನೀಡಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕರೆ ಸರ್ಕಾರಿ ಜಮೀನಿನ ಅನುಮೋದನೆ ಇನ್ನೂ ಬಾಕಿ ಇದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಜಮೀನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರುತ್ತದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.
ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅಗತ್ಯ ಪರವಾನಗಿ ಅಥವಾ ದಾಖಲೆಗಳಿಲ್ಲದೆ ಅನಧಿಕೃತವಾಗಿ ಆರ್.ಎಂ.ಸಿ (ರೆಡಿ-ಮಿಕ್ಸ್ ಕಾಂಕ್ರೀಟ್) ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಸಂಬಂಧಪಟ್ಟ ಮಾಲೀಕರಿಗೆ ನೋಟಿಸ್ ನೀಡುವಂತೆ ಸೂಚಿಸಿದ್ದಾರೆ. ಹಾಗೂ ಡಾ. ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಒತ್ತಿ ಹೇಳಿದರು.
ಬೆಳಪು ಕೈಗಾರಿಕಾ ಪ್ರದೇಶಕ್ಕೆ, ಪ್ರವೇಶ ರಸ್ತೆಯ ವಿಸ್ತರಣೆಗೆ ಅಗತ್ಯವಿರುವ ಸಣ್ಣ ಪ್ರಮಾಣದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕು ಎಂದು ಅವರು ನಿರ್ದೇಶಿಸಿದರು.
ಮಿಯಾರು ಕೈಗಾರಿಕಾ ಪ್ರದೇಶದ ಪ್ರತಿಯೊಂದು ಕೈಗಾರಿಕಾ ಘಟಕವು ಸ್ಥಳೀಯ ನೀರಿನ ಅಭಾವವನ್ನು ಪರಿಹರಿಸಲು ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಅಳವಡಿಸಬೇಕು ಎಂದು ಕಡ್ಡಾಯಗೊಳಿಸಿದರು.
ಪ್ರಸ್ತುತ ಜಿಲ್ಲೆಯಲ್ಲಿ 22 ರಫ್ತು ಆಧಾರಿತ ಘಟಕಗಳಿವೆ, ಮತ್ತು ವಿದೇಶಿ ರಫ್ತುಗಳನ್ನು ಪ್ರೋತ್ಸಾಹಿಸಲು ಮತ್ತು ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕೆಗಳ ಸಂಘದ ಜಿಲ್ಲಾಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ., ಶಿವಮೊಗ್ಗ ಕೆಎಸ್ಎಸ್ಐಡಿಸಿ ಸಹಾಯಕ ಪ್ರಧಾನ ವ್ಯವಸ್ಥಾಪಕ ನಾಗಭರಣ ಕೆ.ಪಿ., ಸಣ್ಣ ಕೈಗಾರಿಕೋದ್ಯಮಿಗಳು ಮತ್ತು ಇತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.