ಮಂಗಳೂರು, ಜೂ 19 (Daijiworld News/SM): ಮಂಗಳೂರಿನ ಸರಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ ಬಡ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ತೋರಿಸಲಾಗುತ್ತಿದೆ. ಗಾಯಾಳುವಿನ ಬಗ್ಗೆ ಸಿಬ್ಬಂದಿಗಳು ಎಚ್ಚರಿಕೆ ವಹಿಸದೇ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀರಾಮ ಸೇನೆ ಸಂಘಟನೆ ವತಿಯಿಂದ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀರಾಮ ಸೇನೆಯ ಮುಖಂಡರು, ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ರಾಜೇಶ್ವರಿಯವರನ್ನು ಕೂಡಲೇ ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು. ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಅಧೀಕ್ಷಕಿ ಅಮಾನತಿಗೆ ಆಗ್ರಹಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೆಲವು ದಿನಗಳ ಹಿಂದೆ ನಡೆದ ಅಪಘಾತವೊಂದರಲ್ಲಿ ಗಾಯಗೊಂಡ ವ್ಯಕ್ತಿಯನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರಾಗಲಿ ಅಲ್ಲಿನ ಸಿಬ್ಬಂದಿಗಳಾಗಲಿ ಯಾವುದೇ ನಿಗಾ ವಹಿಸಲಿಲ್ಲ. ಈ ವಿಚಾರವನ್ನು ಸಾಮಾಜಿಕ ಜಾಲ ತಾಣದ ಮೂಲಕ ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಿದ ಸಂಘಟನೆಯ ಕಾರ್ಯಕರ್ತರ ವಿರುದ್ಧ ದೂರು ನೀಡಿ ಜೈಲಿಗಟ್ಟಿರುವ ಕ್ರಮ ಸರಿಯಲ್ಲ ಎಂದರು.