ಮಂಗಳೂರು, ಜೂ 19(Daijiworld News/SM): ದ.ಕ. ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ನೀರು ಕೊಯ್ಲಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ‘ಹಸಿರು ಕಟ್ಟಡ ನೀತಿ’ ಗ್ರೀನ್ ಬಿಲ್ಡಿಂಗ್ ಪಾಲಿಸಿಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.
ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಲಾದ ಮಳೆ ಕೊಯ್ಲು ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಹೊಸ ಮನೆ ಅಥವಾ ಕಟ್ಟಡ ರಚನೆ ಸಂದರ್ಭ ಕಡ್ಡಾಯವಾಗಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಅಳವಡಿಸಬೇಕು. ಕನಿಷ್ಠ ಸಂಖ್ಯೆಯಲ್ಲಿ ಮರ ಗಿಡಗಳನ್ನು ಬೆಳೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಇನ್ನು ಈ ರೀತಿ ನಿಯಮಗಳನ್ನು ಅಳವಡಿಸುವವರಿಗೆ ತೆರಿಗೆಯಲ್ಲಿ ವಿನಾಯಿತಿಯಂತಹ ಪ್ರೋತ್ಸಾಹಕ ಕ್ರಮ ಹಾಗೂ ಪಾಲಿಸದವರಿಗೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ರೀತಿಯಲ್ಲಿ ನಿಯಮಗಳನ್ನು ರೂಪಿಸಲಾಗುವುದು ಎಂದು ಸಚಿವರು ಹೇಳಿದರು.