ಉಡುಪಿ, ಜೂ. 20 (DaijiworldNews/TA): ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್ ಯುಐ ಅಕ್ಷೇಪ ವಿಚಾರವಾಗಿ ಮಾತನಾಡಿ, ಚಕ್ರವರ್ತಿ ಸೂಲಿಬೆಲೆ ಅವರು ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರೋದನ್ನ ಕಪ್ಪು ಮಾಡುವುದರಲ್ಲಿ ನಿಸ್ಸೀಮರು. ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ತರನಾದ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಕೊಟ್ಟಿದೆ.
ಇಡೀ ದೇಶದ ಇತಿಹಾಸದಲ್ಲಿ ಸಂವಿಧಾನವನ್ನು ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್. ನಾವು ಚಕ್ರವರ್ತಿ ಸೂಲಿಬೆಲೆಯಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಹೇಳಿದರು.