ಉಡುಪಿ, ಜೂ. 21 (DaijiworldNews/AA): "ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ಅದರ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಿ. ಅಸಮರ್ಥ ಸಂಸದರ ಬಗ್ಗೆ ಪ್ರತಿಭಟನೆ ಮಾಡಲಿ" ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಸಚಿವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಕರಾವಳಿಯ ಎರಡು ಜಿಲ್ಲೆಗಳಲ್ಲಿ ಬಿಜೆಪಿ ವತಿಯಿಂದ ನಡೆಯಲಿರುವ ಪ್ರತಿಭಟನೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರತಿಭಟನೆಗೆ ಪ್ರಾಮುಖ್ಯತೆ ಇದೆ. ಆದರೆ ವಿರೋಧ ಪಕ್ಷಕ್ಕೆ ಮಾಡಲು ಬೇರೆ ಕೆಲಸ ಇಲ್ಲ. ನರೇಗಾ ಹಣ ಬಿಡುಗಡೆಯಾಗಿಲ್ಲ, ಅದರ ಬಗ್ಗೆ ಪ್ರತಿಭಟನೆ ಮಾಡಲು ಸಾಧ್ಯವೇ? ಜನರ ದಿಕ್ಕು ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ" ಎಂದು ಕಿಡಿಕಾರಿದರು.
"ಪಕ್ಷದ ಆಂತರಿಕ ಕಚ್ಚಾಟಗಳನ್ನು ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಬಿಜೆಪಿಯ ಡ್ರಾಮಾ. ಈ ಬಗ್ಗೆ ಬಿಜೆಪಿಯ ಕಾರ್ಯಕರ್ತರೇ ಬೇಸತ್ತು ಹೋಗಿದ್ದಾರೆ. ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಜನರ ದಿಕ್ಕು ತಪ್ಪಿಸಲು ಹೋರಾಟ, ಪ್ರತಿಭಟನೆ ಮಾಡಿ, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ" ಎಂದು ಆರೋಪಿಸಿದರು.