ಮಂಗಳೂರು, ಜೂ25(Daijiworld News/SS): ಭ್ರೂಣ ಹತ್ಯೆ ಕಾನೂನು ಬಾಹಿರ ಚಟುವಟಿಕೆಯಾಗಿದ್ದರೂ ಇಂತಹ ಘಟನೆಗಳು ವರದಿಯಾಗುತ್ತಲೇ ಇದೆ ಎಂದು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ವಿರುದ್ಧವಾಗಿ ಭ್ರೂಣ ಲಿಂಗ ಪತ್ತೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್ಗಳ ಮಾಹಿತಿ ನೀಡಿದವರಿಗೆ 10 ಸಾವಿರ ರೂ. ಬಹುಮಾನ ಹಾಗೂ ಪ್ರಶಸ್ತಿ ನೀಡಲಾಗುವುದು. ಭ್ರೂಣ ಹತ್ಯೆ ಕಾನೂನು ಬಾಹಿರ ಚಟುವಟಿಕೆಯಾಗಿದ್ದರೂ ಇಂತಹ ಘಟನೆಗಳು ವರದಿಯಾಗುತ್ತಿವೆ. ಹೀಗಾಗಿ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಸಾಮಾನ್ಯರಂತೆ ತೆರಳಿ ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಿಳೆಯರಿಗೆ ಸಂಬಂಧಿಸಿದಂತೆ ಹೆಚ್ಚು ಸಂರಕ್ಷ ಣೆ ಒದಗಿಸುವ ಹಿನ್ನಲೆಯಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ರಕ್ಷಿಸಲು ಸಂರಕ್ಷಣಾ ಕಾಯ್ದೆ ಅನುಷ್ಠಾನಗೊಂಡಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಗೆ ಒಂದೇ ಸೂರಿನಡಿ ರಕ್ಷಣೆ ನೀಡಲು ವಿಶೇಷ ಗೆಳತಿ ಚಿಕಿತ್ಸೆ ಘಟಕದ ಸೌಲಭ್ಯ ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯಲ್ಲಿ ದೊರಕುತ್ತಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಹಾಗೂ ಇಲಾಖೆ ವತಿಯಿಂದ ನಡೆಯುವಂತಹ ಜನಪರ ಕಾರ್ಯಕ್ರಮಗಳ ಕುರಿತು ಆನ್ಲೈನ್ ಪ್ರಚಾರ ನಡೆಸಿ ಬಡತನದಲ್ಲಿರುವಂತಹವ ಜನತೆಗೆ ತಲುಪುವಂತಾಗಬೇಕು ಎಂದು ಹೇಳಿದರು.
ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣ ಹಾಗೂ ಮಕ್ಕಳ ರಕ್ಷಣೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಲಾಖಾ ವತಿಯಿಂದ ದೊರಕುವಂತಹ ಯೋಜನೆಗಳ ಸಂಪೂರ್ಣ ಮಾಹಿತಿ ಜನತೆಗೆ ತಿಳಿಸಬೇಕು. ಅಂಗನವಾಡಿ ಕೇಂದ್ರಗಳು ಗರ್ಭಿಣಿಯರ ನಿಖರವಾದ ಮಾಹಿತಿಯನ್ನು ಪಡೆದುಕೊಳ್ಳಬೇಕು. ಮಾತೃ ವಂದನಾ ಯೋಜನೆಯಡಿ ಗರ್ಭಿಣಿಯರಿಗೆ ದೊರಕಬೇಕಾದ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.