ಮಂಗಳೂರು, ಆ. 17 (DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವ್ಯಾಪಕ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕೆಲವೆಡೆ ಬಿಟ್ಟು ಬಿಟ್ಟು ಮಳೆಯಾದರೆ, ಬಹುತೇಕ ಕಡೆಗಳಲ್ಲಿ ದಿನವಿಡೀ ಮಳೆ ಸುರಿದಿದೆ.

ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಮಧ್ಯದ ಶಿರಿಬಾಗಿಲು ಹಾಗೂ ಎಡಕುಮೇರಿ, ಎಡಕುಮೇರಿ-ಕಡಗರವಳ್ಳಿ, ಕಡಗರವಳ್ಳಿ-ದೋಣಿಗಾಲ್ ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ ಭೂಕುಸಿತ ಉಂಟಾಗಿದೆ. ಹೀಗಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಆ. 18ರಂದು ರೆಡ್ ಅಲರ್ಟ್ ಇರಲಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆ. 17, 19 ಹಾಗೂ 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 21, 22ರಂದು ಎಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಐಎಂಡಿ ಸೂಚನೆ
ಆ. 16ರಿಂದ 19ರ ವರೆಗೆ ಅರಬ್ಬಿ ಸಮುದ್ರದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರಿನಲ್ಲಿ ಶನಿವಾರ ಗರಿಷ್ಠ 27.6 ಡಿ.ಸೆ. ಹಾಗೂ ಕನಿಷ್ಠ 23.1 ಡಿ.ಸೆ. ತಾಪಮಾನ ದಾಖಲಾಗಿದೆ.
ಸುಬ್ರಹ್ಮಣ್ಯ: ಮನೆಗಳಿಗೆ ಮಳೆ ನೀರು ನುಗ್ಗಿದ ಹಿನ್ನೆಲೆ ಹೊಳೆ ಬದಿ ನಿವಾಸಿಗಳ ಸ್ಥಳಾಂತರ
ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನದಿಂದ ಭಾರೀ ಮಳೆಯಾಗಿದ್ದು, ಗುಂಡ್ಯ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಕಡಬ ತಾಲೂಕಿನ ಇಚ್ಲಂಪಾಡಿ ಮಾನಡ್ಕ ಹೊಳೆ ಬದಿಯ ಕೃಷಿ ಭೂಮಿ, ಮನೆಗಳಿಗೆ ನೀರು ನುಗ್ಗಿದೆ. ಮುಂಜಾಗ್ರತಾ ಕ್ರಮವಾಗಿ ಹಲವಾರು ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ. ಬೆಳ್ತಂಗಡಿ, ಸುಳ್ಯ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಭಾಗಗಳಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಹೊಳೆ, ಹಳ್ಳಗಳು ಉಕ್ಕಿ ಹರಿಯುತ್ತಿವೆ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಸಾಧಾರಣ ಮಳೆಯಾಗಿದ್ದು, ಭಾನುವಾರದ ಬಳಿಕ ನಾಲೈದು ದಿನ ಮಳೆ ಬಿರುಸುಗೊಳ್ಳುವ ಸಾಧ್ಯತೆಯಿದೆ. ಭಾನುವಾರ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಆ. 18 ಮತ್ತು 19ರಂದು ರೆಡ್ ಅಲರ್ಟ್ ಇರಲಿದೆ. ಆ.20ರಂದು ಪುನಃ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲಾಡಳಿತದಿಂದಲೂ ಅಗತ್ಯ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರೆಡ್ ಅಲರ್ಟ್ ಸಂದರ್ಭದಲ್ಲಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಇರಲಿದ್ದು ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ನಿರ್ದೇಶಿಸಿದೆ.