ಮಂಗಳೂರು, ಡಿ 10: ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಎಂಬಲ್ಲಿನ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಹಾಗೂ 2 ಮಂದಿ ಗಿರಾಕಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಡಿ 9 ರಂದು ಬಂಧಿಸಿದ್ದಾರೆ.ರಾಮಕೃಷ್ಣ ಆಪಾರ್ಟ್ ಮೆಂಟ್ ನ ಫ್ಲಾಟ್ ವೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮಂಜುನಾಥ್ (38) ಮತ್ತು ಉಡುಪಿಯ ಮಲ್ಪೆ ನಿವಾಸಿ ಹರೀಶ್, (53), ಹಾಗೂ ಒರ್ವ ಮಹಿಳಾ ಪಿಂಪ್ ಬಂಧಿತರು.ಇವರಿಂದ ನಗದು ಹಣ ರೂ. 2500, 2 ಮೊಬೈಲ್ ಫೋನ್ ಗಳು, ಒಟ್ಟು ರೂ. 15,500 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ 3 ಮಂದಿ ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಹನುಮಂತರಾಯ ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು ಈ ದಾಳಿಯಲ್ಲಿ ಭಾಗವಹಿಸಿದ್ದರು.