ಕುಂದಾಪುರ, ಜು 01 (Daijiworld News/MSP): ಇದೀಗ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲೆಡೆ ವಿದ್ಯಾರ್ಥಿಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬಸ್ರೂರು ಸರ್ಕಾರೀ ಪ್ರೌಢಶಾಲೆಯಲ್ಲಿಯೂ ಇದೇ ರೀತಿ ಮೂವರು ಹೆಚ್ಚಯವರಿ ಶಿಕ್ಷಕರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದ್ದು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಜು 01 ರ ಸೋಮವಾರ ಬೆಳಿಗ್ಗೆ ನಡೆದಿದೆ.
ಕುಂದಾಪುರ ತಾಲೂಕಿನ ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಒಟ್ಟು ಐನೂರ ಹನ್ನೆರಡು ವಿದ್ಯಾರ್ಥಿಗಳಿದ್ದು, ಒಬ್ಬ ಮುಖ್ಯೋಪಾದ್ಯಾಯ ಸೇರಿದಂತೆ ಹದಿನಾರು ಜನ ಶಿಕ್ಷಕರಿದ್ದಾರೆ. ಇವರಲ್ಲಿ ಮೂವರನ್ನು ಹೆಚ್ಚುವರಿ ಶಿಕ್ಷಕರು ಎಂದು ಗುರುತಿಸಿದ್ದು, ಹಿಂದಿ ಹಾಗೂ ಸಮಾಜ ವಿಜ್ಞಾನ ಶಿಕ್ಷಕರನ್ನು ಈಗಾಗಲೇ ವರ್ಗಾವಣೆ ಮಾಡಲಾಗಿದೆ. ವಿಜ್ಞಾನ ಶಿಕ್ಷಕರಿಗೂ ವರ್ಗಾವಣೆ ಆದೇಶ ಬಂದಿದ್ದು, ಮುಖ್ಯೋಪಾದ್ಯಾಯರು ಶಾಲೆಯಿಂದ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಕಂಗಾಲಾದ ವಿದ್ಯಾರ್ಥಿಗಳು ಸೋಮವಾರ ಬೆಳಿಗ್ಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಆರಂಭದಲ್ಲಿ ಮಳೆ ಇದ್ದುದರಿಂದ ಮೈದಾನದಲ್ಲಿ ಕೆಸರು ತುಂಬಿತ್ತು. ಆದರೂ ವಿದ್ಯಾರ್ಥಿಗಳು ಮೈದಾನದಲ್ಲಿಯೇ ಪ್ರತಿಭಟನೆ ಕೂಗಿದರು. ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿ ಮೇಲಧಿಕಾರಿಗಳಿಗೆ ಕಳುಹಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.