ಉಡುಪಿ, ಜು10(Daijiworld News/SS): ಜಿಲ್ಲೆಯ ಪ್ರವಾಸಿ ತಾಣಗಳು ಮತ್ತು ಬೀಚ್ ಪ್ರದೇಶದಲ್ಲಿನ ಗೂಡಂಗಡಿಗಳಲ್ಲಿ ತಯಾರಿಸುವ ಆಹಾರದ ಗುಣಮಟ್ಟ ಪರಿಶೀಲಿಸಲು ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಐಸ್ ಕ್ರೀಂ ಮತ್ತು ಇತರೆ ಆಹಾರ ಸ್ವೀಕರಿಸಲು ಪ್ಲಾಸ್ಟಿಕ್ ಚಮಚ ಮತ್ತು ಇತರೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುತ್ತಿರುವ ಕುರಿತಂತೆ ದೂರುಗಳಿದ್ದು, ಸಂಬಂಧಪಟ್ಟ ನಗರಸಭೆ ಮತ್ತು ಪುರಸಭೆಯ ಅಧಿಕಾರಿಗಳು ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಲುಷಿತ ಐಸ್ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಕಲುಷಿತ ನೀರಿನಿಂದ ತಯಾರಿಸಿದ ಐಸ್ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು, ಈ ಕುರಿತಂತೆ ಐಸ್ಕ್ಯಾಂಡಿ ತಯಾರಕರ ವಿರುದ್ಧ ಇದುವರೆಗೆ ಸೂಕ್ತ ಕ್ರಮ ಕೈಗೊಳ್ಳದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಕಲುಷಿತ ಐಸ್ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಯ ಕುರಿತು ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ. ಇದು ಕಲುಷಿತ ಆಹಾರ ತಯಾರಕರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.