ಮಂಗಳೂರು, ಜು10(Daijiworld News/SS): ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾದ ಪರಿಣಾಮ, ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲೂ ಮುಂಗಾರು ಮಳೆ ಅಬ್ಬರ ಪಡೆದಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಚುರುಕು ಪಡೆದಿದ್ದು, ಜಿಲ್ಲೆಯ ಜೀವನಾಡಿಯಾದ ನೇತ್ರಾವತಿ ಮತ್ತು ಕುಮಾರಾಧಾರಾ ತುಂಬಿ ಹರಿಯುತ್ತಿದೆ.
ಕರಾವಳಿಯಲ್ಲಿ ದುರ್ಬಲವಾಗಿದ್ದ ಮುಂಗಾರು ಚುರುಕುಗೊಂಡಿದೆ. ಕರಾವಳಿಯ ನಾನಾ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮಂಗಳೂರು – ಉಡುಪಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಜೋರಾದ ಗಾಳಿ-ಮಳೆ ಸುರಿಯುತ್ತಿದೆ. ಕುಡಿಯುವ ನೀರಿನ ಬರ ಎದುರಿಸುತ್ತಿದ್ದ ಉಡುಪಿ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಮಳೆ ಹಿನ್ನಲೆ, ರಕ್ಷಣಾ ತಂಡಗಳು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಕರಾವಳಿ ಭಾಗಕ್ಕೆ ಜೂ. 14ರಂದು ಮುಂಗಾರು ಪ್ರವೇಶಿಸಿದರೂ ಕ್ಷೀಣಿಸಿತ್ತು. ಹಾಗಾಗಿ ಪ್ರಸಕ್ತ ಸಾಲಿನಲ್ಲಿ ಶೇ. 27ರಷ್ಟು ಮಳೆ ಕೊರತೆ ಇದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ.
ಮಳೆಯಾಗುತ್ತಿರುವ ಹಿನ್ನಲೆ ಬೀಚ್ಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ಪಣಂಬೂರು, ತಣ್ಣೀರು ಬಾವಿ ಹಾಗೂ ಮಲ್ಪೆ ಬೀಚ್ನಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಕಳೆದ 2 ತಿಂಗಳಿನಿಂದ ಪ್ರವಾಸಿಗರನ್ನು ಸಮುದ್ರದ ಬಳಿ ಬಿಡುತ್ತಿಲ್ಲ ಎಂದು ಪಣಂಬೂರು ಬೀಚ್ ಅಭಿವೃದ್ಧಿ ನಿಗಮದ ಸಿಇಒ ಯತೀಶ್ ಬೈಕಂಪಾಡಿ ಹಾಗೂ ಮಲ್ಪೆ ಬೀಚ್ ನಿರ್ವಹಣಾಧಿಕಾರಿ ಸುದೇಶ್ ಶೆಟ್ಟಿ ಹೇಳಿದ್ದಾರೆ.