ಉಳ್ಳಾಲ, ಡಿ. 18(DaijiworldNews/TA): ಕಾರು ಮತ್ತು ಬೈಕ್ ಮಧ್ಯೆ ಸಂಭವಿಸಿದ ಢಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ಬುಧವಾರ ತಡರಾತ್ರಿ ನಡೆದಿದೆ. ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ.

ಇವರು ವಾಮಂಜೂರು ಮತ್ತು ದೇರಳಕಟ್ಟೆ ಮೂಲದವರು ಎಂದು ತಿಳಿದು ಬಂದಿದೆ. ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಚಲಿಸುತ್ತಿದ್ದ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.