ಪುತ್ತೂರು, ಜು16(Daijiworld News/SS): ಕಾಲೇಜು ಮತ್ತು ಕಾಲೇಜಿನ ಸುತ್ತಮುತ್ತಲಿನ ಅಂಗಡಿಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಸಿಕ್ಕರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರಾದ ಎಚ್.ಕೆ. ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ವಿರುದ್ಧ ವಿಶೇಷ ಜಾಗೃತಿ ಅಭಿಯಾನ ಆರಂಭವಾಗಿದೆ. ಎಚ್ಚರಿಕೆ ನೀಡುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮೊದಲ ಹಂತದಲ್ಲಿ ಅನಿರೀಕ್ಷಿತ ದಾಳಿ ನಡೆಸಲಾಗುತ್ತಿದೆ. ಮೊದಲ ಹಂತದ ದಾಳಿಯಲ್ಲಿ ಎಚ್ಚರಿಕೆ ನೀಡುವ ಕ್ರಮ ಮಾತ್ರ ಕೈಗೊಳ್ಳಲಾಗುತ್ತದೆ. ಎರಡನೇ ಹಂತದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ
ಈಗಾಗಲೇ ಕಾಲೇಜು ಸುತ್ತಮುತ್ತಲು ಇರುವ ಪರಿಸರದ ಅಂಗಡಿಗಳಿಗೂ ದಾಳಿ ನಡೆಸಲಾಗಿದೆ. ಇಲ್ಲಿ ವಶಪಡಿಸಿಕೊಂಡಿರುವ ಮೊಬೈಲ್ಗಳನ್ನು ವಾರಸುದಾರರಿಗೆ ನೀಡಲಾಗುವುದು. ಮುಂದಿನ ಹಂತದ ದಾಳಿ ವೇಳೆ ಅಂಗಡಿಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಸಿಕ್ಕಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಬಹುತೇಕ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿಯೂ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆದರೆ ಇಲ್ಲಿ ಅನುದಾನದ ಲಭ್ಯತೆ ನೋಡಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಶಾಲಾ ಕಾಲೇಜುಗಳಿಗೆ ಭೇಟಿ ನೀಡಲು ಅಧಿಕಾರಿಯೊಬ್ಬರನ್ನು ಶೀಘ್ರ ನೇಮಕ ಮಾಡಲಾಗುವುದು. ಇದಲ್ಲದೆ ಶಾಲಾ ಕಾಲೇಜುಗಳಲ್ಲಿ ಸಮಾಲೋಚನಾ ಸಮಿತಿ ರಚನೆ ನಡೆಯುತ್ತಿದೆ ಎಂದು ತಿಳಿಸಿದರು.