ಮಂಗಳೂರು, ಜು 22 (DaijiworldNews/SM): ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿಯಿಂದ ಪದವಿ ಪೂರ್ವ ತರಗತಿಗಳವರೆಗೆ ರಜೆ ಘೋಷಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇನ್ನು ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಬೇಕು. ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದ್ದಾರೆ.