ಕಾಸರಗೋಡು, ಫೆ. 21 (DaijiworldNews/AA): ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಮೃತಪಟ್ಟು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬದಿಯಡ್ಕದ ನೆಲ್ಲಿಕಟ್ಟೆ ಎಂಬಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.





ನೆಲ್ಲಿಕಟ್ಟೆ ನಿವಾಸಿ ಶಂಶುದ್ದೀನ್ (68) ಮೃತಪಟ್ಟ ದುರ್ದೈವಿ. ಅವರ ಮಗ ಸಲ್ಮಾನ್ ಹ್ಯಾರಿಸ್ (22) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 21ರ ಶನಿವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದೆ. ಶಂಶುದ್ದೀನ್ ಅವರು ಮಗನೊಂದಿಗೆ ಕಾರಿನಲ್ಲಿ ಕಾಸರಗೋಡು ರೈಲ್ವೇ ನಿಲ್ದಾಣಕ್ಕೆ ತೆರಳುತ್ತಿದ್ದಾಗ, ಪುತ್ತೂರಿನತ್ತ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತಕ್ಷಣವೇ ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ತಂದೆ-ಮಗನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಗಂಭೀರವಾಗಿ ಗಾಯಗೊಂಡಿದ್ದ ಶಂಶುದ್ದೀನ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಲ್ಮಾನ್ ಹ್ಯಾರಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನಗಳ ಅತಿವೇಗ ಅಥವಾ ರಸ್ತೆಯ ಸ್ಥಿತಿಗತಿ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.