ಮಂಗಳೂರು, ಆ 06 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಆ. 7 ರಿಂದ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಜನತೆ ಎಚ್ಚರಿಕೆಯಿಂದ ಇರಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಎಚ್ಚರಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದರು
ಇನ್ನು ಮುಂಗಾರು ಚುರುಕುಗೊಂಡ ಪರಿಣಾಮ ಈಗಾಗಲೇ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ, ಮರ ಧರೆಗುರುಳುತ್ತಿದ್ದು , ನದಿಗಳ ಉಕ್ಕಿ ಹರಿಯುತ್ತಿರುವ ಬಗ್ಗೆ ವರದಿಗಳಾಗುತ್ತಿದೆ
ಕಡಲಿನಲ್ಲಿ ತೂಫಾನ್ ಏಳುವ ಸಾಧ್ಯತೆ ಇರುವುದರಿಂದ ಕಡಲಿಗೆ ಮೀನುಗಾರಿಕೆಗೆ ಹೋಗದಂತೆಯೂ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಕಡಲತೀರದಲ್ಲಿ ಕಡಲ್ಕೊರೆತ ಉಂಟಾಗುವ ಸಾಧ್ಯತೆ ಇದ್ದು, ಕಡಲ ತೀರವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.