ಮಂಗಳೂರು, ಆ 06 (Daijiworld News/MSP): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಆ.7, 8 ಮತ್ತು ೯ ರಂದು ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಉಭಯ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಸೇರಿ) ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಇದಲ್ಲದೆ ಮೀನುಗಾರರಿಗೆ ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ, ಪ್ರವಾಸಿಗರು ಎಚ್ಚರ ವಹಿಸುವಂತೆ ಹಾಗೂ ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರ ವಹಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಲು ಸದಾ ಜಾಗೃತರಾಗಿದ್ದು, ದೂರುಗಳಿಗೆ ಸ್ಪಂದಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.