ಉಡುಪಿ,ಆ.09 (Daijiworld News/RD): ಜಿಲ್ಲೆಯ ಗ್ರಾಮಾಂತರ ಪ್ರದೇಶವಾದ ಚೇರ್ಕಾಡಿ ಪಂಚಾಯತ್ ವ್ಯಾಪ್ತಿಯ ಬೆನಗಲ್ ಹಾಡಿಬೆಟ್ಟುವಿನಲ್ಲಿ ಭಾರೀ ಮಳೆಯ ಪರಿಣಾಮವಾಗಿ ಹಟ್ಟಿಯ ಗೋಡೆ ಕುಸಿದು ಬಿದ್ದು ಗಂಗಾ ಎಂಬ ಮಹಿಳೆ ಸಾವನ್ನಪ್ಪಿದ್ದರು. ವಿಚಾರ ತಿಳಿದು ಶಾಸಕರಾದ ಕೆ ರಘುಪತಿ ಭಟ್ ಅವರು ತಕ್ಷಣ ನಿನ್ನೆ ಸ್ಥಳಕ್ಕೆ ಭೇಟಿ ನೀಡಿದ್ದು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ತಿಳಿಸಿದರು. ಅದೇ ರೀತಿ ಇಂದು ಸಂಸದೆ ಶೋಭಾ ಕರಂದ್ಲಾಜೆ ಅವರ ಸಮ್ಮುಖದಲ್ಲಿ ಕುಟುಂಬದ ಸದಸ್ಯರಿಗೆ 4 ಲಕ್ಷ ಪರಿಹಾರ ಧನ ನೀಡಿ, ಸಾಂತ್ವಾನ ಹೇಳಲಾಯಿತು.
ಮುಂದೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಸ್ಥಳೀಯ ಪಂಚಾಯತ್ ಅಧ್ಯಕ್ಷರುಗಳು, ಗ್ರಾಮಾಂತರ ಬಿಜೆಪಿ ಅಧ್ಯಕ್ಷರು, ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು, ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾ, ತಾಲೂಕು ಮಟ್ಟದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.