ಮಂಗಳೂರು, ಆ 09 (Daijiworld News/MSP): ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರ ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿದೆ. ಈಗಾಗಲೇ ಈ ಎರಡು ನದಿ ತಟದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದೆ.
ಪಶ್ಚಿಮ ಘಟ್ಟದಲ್ಲಿಯೂ ಭಾರೀ ಮಳೆ ಸುರಿಯುತ್ತಿದ್ದು, ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ನದಿಯ ತಟದ ಜನ ಆತಂಕದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಜಿಲ್ಲಾಧಿಕಾರಿ " ನೇತ್ರಾವತಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಎಲ್ಲಾ ನಾಗರೀಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು
ಈಗಾಗಲೇ ನದಿ ತೀರದ ಪ್ರಮುಖ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರುವರೆಗೆ ನೇತ್ರಾವತಿ ನದಿ ತೀರದ ಎರಡೂ ಬದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವ ನಾಗರೀಕರು ತಕ್ಷಣದಿಂದದಲೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.