ಬಂಟ್ವಾಳ,ಆ.13.(Daijiworld News/RD): ಕಳೆದ ಹಲವು ದಿನಗಳಿಂದ ಭಾರೀ ಮಳೆಗೆ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಮತ್ತು ಪ್ರವಾಹದಿಂದಾಗಿ 30 ಕೋ.ರೂ. ನಷ್ಟ ಉಂಟಾಗಿದ್ದು, ಇದಕ್ಕೆ ಸೂಕ್ತ ಪರಿಹಾರ ಧನ ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಅವರ ಸಮ್ಮುಖದಲ್ಲಿ ಸೋಮವಾರ ಮನವಿ ನೀಡಿದರು.
ದಕ್ಷಿಣ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬೆಳ್ತಂಗಡಿಯಿಂದ ಮಂಗಳೂರಿಗೆ ಹಿಂದಿರುಗುವಾಗ ಬಂಟ್ವಾಳ ಬೈಪಾಸ್ ಜಂಕ್ಷನ್ನಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಶ್ ನಾಯಕ್ ಉಳಿಪ್ಪಾಡಿ 30 ಕೋಟಿ ರೂ.ಗಳ ನಿಧಿಯನ್ನು ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿಯಲ್ಲಿ ಮನವಿ ಸಲ್ಲಿಸಿದ್ದೇನೆ. ಪ್ರವಾಹದಿಂದ ಹಾನಿಗೊಳಗಾದ ತಾಲ್ಲೂಕಿನ ಸಣ್ಣ ಪುಟ್ಟ ಅಂಗಡಿಗಳಿಗೂ ಸಹ ಪರಿಹಾರ ಒದಗಿಸುವಂತೆ ಕೋರಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಸರ್ಕಾರದ ವಿವಿಧ ಇಲಾಖೆಗಳಿಂದ ಉಂಟಾದ ನಷ್ಟದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರಿಗೆ ತಿಳಿಸಲಾಗಿದೆ. ಹೆಚ್ಚಿನ ಪರಿಹಾರ ನೀಡುವ ಭರವಸೆ ಇದೆ, ಎಂದು ಅವರು ಹೇಳಿದರು.
ಪ್ರವಾಹದ ಸಂದರ್ಭದಲ್ಲಿ ಬಂಟ್ವಾಳದಲ್ಲಿ ಹಗಲು ರಾತ್ರಿ ಎನ್ನದೆ ಶ್ರಮಿಸಿದ ರಕ್ಷಣಾ ತಂಡಗಳಿಗೆ, ಅಧಿಕಾರಿಗಳಿಗೆ, ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕ ರುಕ್ಮಯ್ಯ ಪೂಜಾರಿ, ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಪ್ರಮುಖರಾದ ಎ ಗೋವಿಂದ ಪ್ರಭು, ಪ್ರಕಾಶ್ ಅಂಚನ್, ಉದಯ ಕುಮಾರ್ ರಾವ್, ದಿನೇಶ್ ಅಮ್ಟೂರು ಮೊದಲಾದವರು ಮುಖ್ಯಮಂತ್ರಿಗಳ ಜೊತೆಗಿದ್ದರು. ಡಿ.ಸಿ ಸಸಿಕಾಂತ್ ಸೆಂಥಿಲ್, ಬಂಟ್ವಾಲ್ ತಹಶೀಲ್ದಾರ್ ರಶ್ಮಿ ಎಸ್ ಆರ್, ಪುರಸಭೆಯ ಮುಖ್ಯ ಅಧಿಕಾರಿ ರೇಖಾ ಶೆಟ್ಟಿ, ತಾಲ್ಲೂಕು ಪಂಚಾಯತ್ ಸಿಇಒ ರಾಜಣ್ಣ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ದೀಪಾ ಪ್ರಭು, ಎಎಸ್ಪಿ ಸೈದುಲ್ ಅದಾವತ್ ಮತ್ತು ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.