ಕುಂದಾಪುರ , ಡಿ 21 : ಅಮಾಸೆಬೈಲುನಲ್ಲಿ 2011ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತೀರ್ಪು ಪ್ರಕಟವಾಗಿದ್ದು, ಆರೋಪಿ ಸುರೇಶ್ ಪೂಜಾರಿಗೆ 12 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ.ಗಳ ದಂಡ ವಿಧಿಸಿ ಡಿ 20ರ ಬುಧವಾರ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ ತೀರ್ಪು ನೀಡಿದ್ದಾರೆ.
ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷ ಜೈಲು ಶಿಕ್ಷೆ, ಅದರೊಂದಿಗೆ ಜೀವ ಬೆದರಿಕೆಯೊಡ್ಡಿದ್ದಕ್ಕೆ 2 ವರ್ಷ ಜೈಲು ಶಿಕ್ಷೆಯನ್ನು ಏಕಕಾಲದಲ್ಲಿ ವಿಧಿಸಿ ತೀರ್ಪು ನೀಡಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿದ ಅಂದಿನ ಕುಂದಾಪುರ ವೃತ್ತ ನಿರೀಕ್ಷಕ ಮದನ್ ಗಾಂವ್ಕರ್ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 12 ಮಂದಿಯನ್ನು ಸಾಕ್ಷಿದಾರರನ್ನಾಗಿ ಪರಿಗಣಿಸಲಾಗಿತ್ತು.
ಪ್ರಕರಣದ ಹಿನ್ನೆಲೆ
2011 ರಲ್ಲಿ ಅಮಾಸೆಬೈಲುನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆದರಿಸಿ ಆಕೆಯ ಸೋದರ ಸಂಬಂಧ ಸುರೇಶ್ ಪೂಜಾರಿ ಅತ್ಯಾಚಾರವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಜೀವಬೆದರಿಕೆ ಸಹ ಹಾಕಿದ್ದಾನೆ. ಸರಕಾರದ ಪರವಾಗಿ ವಿಶೇಷ ಅಭಿಯೋಜಕ ಬಿ. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಹರಿಶ್ಚಂದ್ರ ಉದ್ಯಾವರ ವಾದಿಸಿದ್ದರು.