ಮಂಗಳೂರು,ಆ 14 (Daijiworld News/MSP): ಜಿಲ್ಲೆಯಲ್ಲಿ ಮತ್ತೆ ಆ.14 ಮತ್ತು ಆ. 15 ರಂದು ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಆ.14 ರ ಮಧ್ಯಾಹ್ನ 1 ಗಂಟೆಯ ಬಳಿಕ ಆ.15 ರ 8.30 ರವರೆಗೆ, ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡದಲ್ಲಿ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಶಾಲೆಗೆ ತೆರಳಿರುವ ಮಕ್ಕಳು ಇಂದು ಮತ್ತೆ ಮರಳಿ ಸುರಕ್ಷಿತವಾಗಿ ಮನೆ ಸೇರುವವರೆಗೆ ಶಾಲಾ ಆಡಳಿತ ಮಂಡಳಿ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಇದಲ್ಲದೆ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಹಾಗೂ ನದಿಗಳಲ್ಲಿ ಮೀನುಗಾರಿಕೆಗೆ ತೆರಳಬಾರದು. ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯಬಾರದು ಎಂದು ಡಿಸಿ ಸೂಚನೆ ನೀಡಿದ್ದಾರೆ. ಮುಂಜಾಗೃತ ಕ್ರಮವಾಗಿ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಮೊಬೈಲ್, ಕಚೇರಿಯ ದೂರವಾಣಿ ಚಾಲನೆಯಲ್ಲಿರಬೇಕು. ವಾಹನ ಸೇರಿದಂತೆ ತುರ್ತು ನೆರವಿಗೆ ಬೇಕಾದ ಅಗತ್ಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.