ಉಡುಪಿ, ಆ.15(Daijiworld News/SS): ಜಲಪ್ರಳಯಕ್ಕೆ ತುತ್ತಾದ ಕರ್ನಾಟಕ ರಾಜ್ಯದ ಜಿಲ್ಲೆಗಳಿಗೆ ಕೊಲ್ಲೂರು ದೇವಸ್ಥಾನ ಪರಿಹಾರ ದೇಣಿಗೆ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.
ಕೊಲ್ಲೂರು ದೇವಾಲಯದ ಆಡಳಿತ ಮಂಡಳಿ ಸಭೆ ನಡೆಸಿದ್ದು, ಮಳೆಯ ರೌದ್ರಾವತಾರಕ್ಕೆ ನಲುಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ನೆರೆ ಪೀಡಿತ ಕರ್ನಾಟಕ, ಅದರಲ್ಲೂ ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವು ನೀಡುವ ತೀರ್ಮಾನ ಕೈಗೊಂಡಿದ್ದು, 1 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವ ಪ್ರಾಸ್ತಾವನೆಯನ್ನು ಮುಜರಾಯಿ ಇಲಾಖೆಗೆ ಸಲ್ಲಿಸಿದೆ.
ಕಳೆದ ವರ್ಷ ತೀವ್ರ ಬರಗಾಲ ಎದುರಿಸಿದ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. 2009ರ ನಂತರ ಈ ಜಿಲ್ಲೆಗಳಲ್ಲಿ ಈ ಬಾರಿ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ರಾಜ್ಯದಲ್ಲಿನ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ ನೀಡಿದೆ.