ಉಡುಪಿ, ಆ 26 (DaijiworldNews/SM): ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಭಾಗಶಃ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸುವಂತೆ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಸೂಚಿಸಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಳೆ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ 4 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ನೀಡಿದ ಮಾಹಿತಿಗೆ ಸಂಬಂಧಿಸಿದಂತೆ ಮಾತನಾಡಿದ ಸಂಸದರು ಜಿಲ್ಲೆಯಲ್ಲಿ ಭಾಗಶ: ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನ: ಪರಿಶೀಲಿಸಿ, ಮನೆಯವರ ಅಭಿಪ್ರಾಯ ಪಡೆದು, ಗರಿಷ್ಠ ಮೊತ್ತದ ಪರಿಹಾರ ವಿತರಿಸುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚಿಸಿದರು.
ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಇಂದಿನವರೆಗೆ 708 ಪ್ರಕರಣಗಳಲ್ಲಿ ಒಟ್ಟು 325 ಹೆಕ್ಟೇರ್ ಬೆಳೆ ಹಾನಿಯಾಗಿದೆ, ಅಂದಾಜು 22 ಲಕ್ಷ ನಷ್ಟವಾಗಿದೆ, ತೋಟಗಾರಿಕಾ ಬೆಳೆಯಲ್ಲಿ 11.26 ಎಕ್ರೆಗೆ ಹಾನಿಯಾಗಿದ್ದು, ಅಂದಾಜು 14.64 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸಮುದ್ರ ಕೊರೆತ ತಡೆಯುವ ಕುರಿತಂತೆ ಸೂಕ್ತ ಯೋಜನೆ ರೂಪಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಸದರು ಸೂಚಿಸಿದರು.
ಮುಂದಿನ ವರ್ಷಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಬಜೆ ಡ್ಯಾಮ್ನಲ್ಲಿ ತುಂಬಿರುವ ಹೂಳನ್ನು ತೆಗೆಯುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು.