ಮಂಗಳೂರು ಡಿ 27 : ಕಳಸಾ ಬಂಡೂರಿ ಹಾಗೂ ಮಹದಾಯಿ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಡಿ.27ರಂದು ಉತ್ತರ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಆ ಮೂಲಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉತ್ತರ ಕರ್ನಾಟಕದ ಈ ಎರಡು ನೀರಾವರಿ ಯೋಜನೆ ಜಾರಿಗೆ ಸಂಬಂದಿಸಿದಂತೆ ರಾಜ್ಯದೆಲ್ಲೆಡೆ ಹಕ್ಕೋತ್ತಾಯ ಜೋರಾಗತೊಡಗಿದೆ.
ಮಹದಾಯಿ ಹಾಗೂ ಕಳಸಾ ಬಂಡೂರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯಲಿರುವ ಈ ಬೃಹತ್ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಸೇರಿದಂತೆ 100 ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸುವ ನಿರೀಕ್ಷೆಯಿದೆ. ಡಿ.15ರಂದು ಉತ್ತರ ಕರ್ನಾಟಕದ ಜನತೆಗೆ ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಿಹಿ ಸುದ್ದಿ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದರು. ಆದರೆ, ಯಡಿಯೂರಪ್ಪನವರು ಈಗ ತಮ್ಮ ಮಾತನ್ನು ತಪ್ಪಿದ್ದು, ಉತ್ತರ ಕರ್ನಾಟಕದ ಜನತೆಗೆ ಸುಳ್ಳು ಭರವಸೆ ಕೊಟ್ಟಿದ್ದಾರೆ. ಜತೆಗೆ ಮಹದಾಯಿ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಇಚ್ಛಾಶಕ್ತಿಯನ್ನು ಪ್ರದರ್ಶಿಸುವ ಮೂಲಕ ಮಹದಾಯಿ ವಿವಾದವನ್ನು ಬಗೆಹರಿಸುವುದಕ್ಕೆ ಪ್ರಯತ್ನಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.27ರಂದು ಉತ್ತರ ಕರ್ನಾಟಕದಾದ್ಯಂತ ಬಂದ್ಗೆ ಕರೆ ನೀಡುವ ಮೂಲಕ ಪ್ರತಿಭಟನೆ ನಡೆಸುವುದಕ್ಕೆ ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಹೋರಾಟ ಪರ ಸಂಘಟನೆಗಳು ತೀರ್ಮಾನಿಸಿವೆ.