ಉಡುಪಿ, ಸೆ 03 (Daijiworld News/MSP): ಕಳೆದ ಲೋಕಸಭೆ ಚುನಾವಣೆ ಸಂದರ್ಭ ಉಡುಪಿ - ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಚಿಹ್ನೆಯಡಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸೋಲುಂಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದೀಗ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಕೆ ಕುಮಾರಸ್ವಾಮಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದು, " ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ವಿಷಯವನ್ನು ನಾನು ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿಯೂ ಚರ್ಚಿಸಿದ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದರಿಂದ ನಾನು ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಬೇಕಾಯಿತು. ಈ ಸಂದರ್ಭ ಜೆಡಿಎಸ್ ಪಕ್ಷದ ಸದಸ್ಯರು ಬಿ ಫಾರಂನಲ್ಲಿ ಪಕ್ಷದ ಸದಸ್ಯನೆಂದು ನಮೂದಿಸಲ್ಪಟ್ಟಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಪದಾಧಿಕಾರಿಗಳು ನನಗೆ ಲೋಕಸಭಾ ಚುನಾವಣೆ ಸಂದರ್ಭ ಸಂಪೂರ್ಣ ಬೆಂಬಲ ನೀಡಿದ್ದರು. ಇದೀಗ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಇಲ್ಲದಿರುವುದರಿಂದ ನಾನು ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ " ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅತೃಪ್ತರ ರಾಜೀನಾಮೆಯ ಬಳಿಕ ಬಿಜೆಪಿ ಸರ್ಕಾರಕ್ಕೆ ಅಸ್ತಿತ್ವಕ್ಕೆ ಬಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ನಡುವೆ ಇದ್ದ ಮೈತ್ರಿಯೂ ಮುರಿದುಬಿದ್ದಿತ್ತು.