ಮಂಗಳೂರು, ಸೆ 04 (Daijiworld News/MSP): ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಸೆ.4 ರ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ, "ಡಿ.ಕೆ.ಶಿವಕುಮಾರ್ ಬಂಧನವ ನಿಜಕ್ಕೂ ಖಂಡನೀಯ. ಜಾರಿ ನಿರ್ದೇಶನಾಲಯವು ಕಳೆದ ನಾಲ್ಕು ದಿನಗಳಿಂದ ಶಿವಕುಮಾರ್ಗೆ ಕಿರುಕುಳ ನೀಡುತ್ತಿದೆ. ಡಿ.ಕೆ.ಶಿವಕುಮಾರ್ ಇಡಿಯೊಂದಿಗೆ ಸಹಕರಿಸಿದರೂ ಕೂಡಾ, ಶಿವಕುಮಾರ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಬಂಧಿಸಲಾಗಿದೆ ಇದು ಸರಿಯಲ್ಲ ಎಂದು ದೂರಿದರು.
ಮಾಜಿ ಸಚಿವ ರಮಾನಾಥ್ ರೈ ಮಾತನಾಡಿ , "ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ದ್ವೇಷದ ರಾಜಕೀಯವನ್ನು ಮಾಡುತ್ತಿದ್ದಾರೆ. ಕೇಂದ್ರದ ನಿಜೆಪಿ ಸರ್ಕಾರ ಪ್ರತಿಪಕ್ಷದ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಗುರಿಯಾಗಿಸಿಕೊಂಡಿದ್ದಾರೆ. ಯಡಿಯೂರಪ್ಪ ಕುದುರೆ ವ್ಯಾಪಾರದಲ್ಲಿ ಭಾಗಿಯಾಗಿದ್ದಾಗ ಇ ಡಿ ಇಲಾಖೆ ಮೌನವಾಗಿದ್ದವು. ಸರ್ಕಾರದ ಹತಾಶೆಯನ್ನು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಸರ್ಕಾರ ಬಂಧಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯ ಸಂದರ್ಭ ಕಾಂಗ್ರೆಸ್ ಮುಖಂಡರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಏತನ್ಮಧ್ಯೆ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಪ್ರತಿಮೆಯನ್ನು ಸುಟ್ಟುಹಾಕಿ ಬಳಿಕ ರಸ್ತೆ ತಡೆಯಲು ಪ್ರಯತ್ನಿಸಿದಾಗ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ಬಂಧಿಸಿದರು.
ಈ ಸಂದರ್ಭ ಸಂಚಾರದಲ್ಲಿ ವ್ಯತ್ಯಯವಾಯಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಶಕುಂತಲಾ ಶೆಟ್ಟಿ, ಅಭಯಚಂದ್ರ ಜೈನ್ ಮತ್ತು ಇತರರು ಉಪಸ್ಥಿತರಿದ್ದರು.