ಬೆಳ್ತಂಗಡಿ, ಜು. 07 (DaijiworldNews/TA): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಗಡಾಯಿಕಲ್ಲು ಚಾರಣಕ್ಕೆ ಜುಲೈ 8ರಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ನಿರಂತರ ಮಳೆಯಿಂದ ಬೆಟ್ಟದ ಕಲ್ಲುಗಳು ಹಾಗೂ ಚಾರಣದ ಹಾದಿ ತೀವ್ರವಾಗಿ ಜಾರುವ ಸ್ಥಿತಿಗೆ ತಲುಪಿರುವುದರಿಂದ ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಸಾರ್ವಜನಿಕರು ಹಾಗೂ ಚಾರಣಿಗರ ಪ್ರವೇಶವನ್ನು ನಿರ್ಬಂಧಿಸಿ ಅಧಿಕೃತ ಆದೇಶ ಹೊರಡಿಸಿದೆ.
ಈ ವರ್ಷ ಜೂನ್ 1ರಂದು ಗಡಾಯಿಕಲ್ಲು ಚಾರಣಕ್ಕೆ ಅಧಿಕೃತ ಚಾಲನೆ ನೀಡಲಾಗಿತ್ತು. ಆದರೆ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೆಲವೇ ದಿನಗಳಲ್ಲಿ ಮೊದಲ ಬಾರಿಗೆ ಚಾರಣವನ್ನು ಸ್ಥಗಿತಗೊಳಿಸಲಾಗಿತ್ತು. ಬಳಿಕ ಹವಾಮಾನದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಜೂನ್ 25ರಂದು ಮತ್ತೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೆ ಭಾರೀ ಮಳೆಯಾಗುತ್ತಿರುವುದರಿಂದ ಜುಲೈ 8ರಿಂದ ಪುನಃ ಚಾರಣ ನಿಷೇಧ ಜಾರಿಗೊಳಿಸಲಾಗಿದೆ. ಇದೇ ವೇಳೆ, ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 130 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ಜಲಾವೃತದ ಆತಂಕ ಎದುರಾಗಿದ್ದು, ಘಟ್ಟ ಪ್ರದೇಶಗಳು ಹಾಗೂ ಗುಡ್ಡಗಾಡು ವಲಯಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಘಾಟಿ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಗುಡ್ಡದ ತಪ್ಪಲಿನಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಮನವಿ ಮಾಡಿದೆ.