ಮಂಗಳೂರು, ಜು. 07 (DaijiworldNews/AA): ಭಾರತೀಯ ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆ, ಜುಲೈ 8, ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಡಳಿತದ ಈ ಆದೇಶವನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ದ.ಕ ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಸಾರ್ವಜನಿಕರ ಸುರಕ್ಷತೆಗಾಗಿ ಜಿಲ್ಲಾಡಳಿತವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ-
* ಮಕ್ಕಳು ತಗ್ಗು ಪ್ರದೇಶಗಳು, ಜಲಾವೃತವಾದ ಸ್ಥಳಗಳು, ಕೆರೆಗಳು, ನದಿ ತೀರ ಅಥವಾ ಸಮುದ್ರ ತೀರದ ಬಳಿಗೆ ಹೋಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕು.
* ಮೀನುಗಾರರು ಕಡಲಿಗೆ ಇಳಿಯದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.
* ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಮತ್ತು ಕಡಲ ತೀರಗಳಿಗೆ ಭೇಟಿ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
* ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ವಿಪತ್ತು ನಿರ್ವಹಣಾ ಕರ್ತವ್ಯಗಳಿಗೆ ಸನ್ನದ್ಧರಾಗಿರಬೇಕು. ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
* ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ ಸಿದ್ಧವಾಗಿರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಯಾವುದೇ ನೈಸರ್ಗಿಕ ವಿಕೋಪಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ವರದಿ ಮಾಡಲು ಸಾರ್ವಜನಿಕರು ಜಿಲ್ಲಾಡಳಿತದ ಟೋಲ್-ಫ್ರೀ ಸಂಖ್ಯೆ 1077 ಅಥವಾ 0824-2442590 ಅನ್ನು ಸಂಪರ್ಕಿಸಬಹುದಾಗಿದೆ.