ಬೆಳ್ತಂಗಡಿ, ಜು. 26 (DaijiworldNews/AA): ಬಾಗಲಕೋಟೆಯಲ್ಲಿ 5.50 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಜಲೀಲ್ ಬಾಬಾನನ್ನು ಆರೋಪಿಯಾಗಿ ಉಲ್ಲೇಖಿಸಿ, ಆತನ ದಸ್ತಗಿರಿ ಬಾಕಿಯಿದೆ ಎಂದು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.
ಇಂದಬೆಟ್ಟು ಗ್ರಾಮದ ಮೊಹಮ್ಮದ್ ಅಲ್ತಾಫ್ (28), ಉಜಿರೆ ಹಳೆಪೇಟೆಯ ಮೊಹಮ್ಮದ್ ಮುಸ್ತಫಾ (28), ಇಂದಬೆಟ್ಟು ಗ್ರಾಮದ ದೇವನಾರಿ ನಿವಾಸಿ ಅಲ್ಫಾಜ್ ಹಾಗೂ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬುವವರು ಪ್ರಕರಣದ ಇತರ ನಾಲ್ವರು ಆರೋಪಿಗಳಾಗಿದ್ದಾರೆ. ಈ ನಾಲ್ವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಆರೋಪಿ ಜಲೀಲ್ ಬಾಬಾ ತಲೆಮರೆಸಿಕೊಂಡಿರುತ್ತಾನೆ.
ಆರೋಪಿಗಳ ಪೈಕಿ ಮನು ಎಂಬಾತ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಉಳಿದ ಆರೋಪಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ನಡೆಸಿದ ದಾಳಿಯಲ್ಲಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನುವಿನಿಂದ 1.50 ಲಕ್ಷ ರೂ. ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ವಿಚಾರಣೆ ವೇಳೆ ದೆಹಲಿಯಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಬೃಹತ್ ಮಾದಕ ವಸ್ತು ಪೂರೈಕೆ ಜಾಲದ ಕುರಿತು ಮಹತ್ವದ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.
ಈ ಮಾಹಿತಿಯ ಆಧಾರದ ಮೇಲೆ ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಸುಮಾರು 5.50 ಕೋಟಿ ರೂ. ಮೌಲ್ಯದ 5.196 ಕೆಜಿ ಎಂಡಿಎಂಎ, ಒಂದು ಕಾರು, ಬ್ಯಾಗ್ಗಳು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ದೆಹಲಿಯಿಂದ ಕಾರಿನಲ್ಲಿ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತಂದು, ಅಲ್ಲಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಪೂರೈಕೆ ಮಾಡುತ್ತಿದ್ದರೆಂಬುದು ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಬಂಧಿತರು, ಪೊಲೀಸರಿಗೆ ಅನುಮಾನ ಬಾರದಂತೆ ಜಲೀಲ್ ಬಾಬಾ ತನ್ನ ಆಂಬ್ಯುಲೆನ್ಸ್ ಬಳಸಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದನೆಂದು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಾಹಿತಿ ಹೊರಬಿದ್ದ ಬಳಿಕ ಜಲೀಲ್ ಬಾಬಾ ಕಳೆದ ಆರು ದಿನಗಳಿಂದ ತಲೆಮರೆಸಿಕೊಂಡಿದ್ದಾನೆ. ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ತುರ್ತು ಆಂಬ್ಯುಲೆನ್ಸ್ ಕರೆಗಳಿಗೂ ಸ್ಪಂದಿಸುತ್ತಿಲ್ಲ ಎಂದು ತಿಳಿದುಬಂದಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ಪರಾರಿಯಾಗಿರುವ ಜಲೀಲ್ ಬಾಬಾನನ್ನು ಬಂಧಿಸಲು ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರಿದಿದೆ.