ಮಂಗಳೂರು, ಸೆ.27 (DaijiworldNews/AA): ನಿಷೇಧಿತ ಮಾದಕವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಮಾರು 24 ಲಕ್ಷ ರೂ. ಮೌಲ್ಯದ 240 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಉಳ್ಳಾಲದ ಮುಡಿಪುವಿನ ಕೈರಂಗಳ ಗ್ರಾಮ ನಿವಾಸಿ ನವಾಜ್ ಯಾನೆ ನವ್ವಾ ಯಾನೆ ಮುಡಿಪು ನವಾಜ್(35), ಉಳ್ಳಾಲದ ಮುಡಿಪುವಿನ ಕೈರಂಗಳ ನಿವಾಸಿ ಮೊಹಮ್ಮದ್ ಆರೀಫ್ ಎನ್(36), ಉಳ್ಳಾಲದ ಮುಡಿಪುವಿನ ಕೈರಂಗಳ ನಿವಾಸಿ ಲಾಯ್ಡ್ ಡಿಸೊಜಾ(35) ಬಂಧಿತ ಆರೋಪಿಗಳು.
ಆರೋಪಿಗಳು ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿ ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸೆ. 26ರ ರಂದು ಸಂಜೆ ಉಳ್ಳಾಲ ತಾಲೂಕು ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಸುಮಾರು 24,00,000 ರೂ. ಮೌಲ್ಯದ 240 ಗ್ರಾಂ ಎಂಡಿಎಂಎ ಹಾಗೂ 4 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಟೆಂಪೋ ವಾಹನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 29,80,000 ರೂ. ಆಗಿರುತ್ತದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆರೋಪಿ ನವಾಜ್ ಎಂಬಾತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಮೋಸ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 16 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆ ಮತ್ತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ತಲಾ ಎರಡು ಪ್ರಕರಣ ಸೇರಿದಂತೆ ಒಟ್ಟು 4 ಪ್ರಕರಣಗಳು ದಾಖಲಾಗಿರುತ್ತವೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.