ಮಂಗಳೂರು, ಅ 18 (Daijiworld News/MSP): ಅರಬ್ಬೀ ಸಮದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು , ಇದರಿಂದ ಕರಾವಳಿಯಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಮಳೆ ಸುರಿಯಲಾರಂಭಿಸಿದೆ.
ವಾಯುಭಾರ ಕುಸಿತದಿಂದ ಕೇರಳ, ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಇನ್ನೇರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಇನ್ನು ಇದರ ಪರಿಣಾಮ ಮಂಗಳೂರು ನಗರದಲ್ಲಿ ಮಧ್ಯಾಹ್ನದ ವೇಳೆಗೆ ಸುರಿದ ಭಾರೀ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳು ಜಲವೃತ್ತಗೊಂಡಿದೆ. ನಗರದ ಜ್ಯೋತಿ ಸರ್ಕಲ್, ಬಲ್ಮಠ, ರೈಲ್ವೇ ನಿಲ್ದಾಣ ಸೇರಿದಂತೆ ಹಲವೆಡೆ ಕೃತಕ ನೆರೆ ಉಂಟಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಅ.18 ಮತ್ತು ಅ.19 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ವೇಳೆ 64.5 ಮಿ.ಮೀನಿಂದ 115.5 ಮಿ.ಮೀ ವರೆಗೆ ಮಳೆ ಬೀಳುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.