ಮಂಗಳೂರು, ಅ.20(Daijiworld News/SS): ರಾಜ್ಯ ಚುನಾವಣಾ ಆಯೋಗ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ದಿನಾಂಕವವನ್ನು ಘೋಷಿಸಿದ್ದು, ನ.12ರಂದು ಪಾಲಿಕೆಯ ವ್ಯಾಪ್ತಿಯ 60 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯು ಅ.24ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಅ.31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನ.4ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
ಮರು ಮತದಾನ ಇದ್ದಲ್ಲಿ ನ.13ರಂದು ಮತದಾನ ಪ್ರಕ್ರಿಯೆ ನಡೆಸಬಹುದಾಗಿದೆ. ನ.14ರಂದು ಆಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಮಹಾನಗರ ಪಾಲಿಕೆ ವ್ಯಾಪ್ತಿಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಯು ಮೂರು ಲಕ್ಷ ರೂ.ವರೆಗೆ ಗರಿಷ್ಠ ವೆಚ್ಚ ಮಾಡಬಹುದಾಗಿದೆ.
ಚುನಾವಣಾ ನೀತಿ ಸಂಹಿತೆಯು ಆರಂಭವಾಗಿದ್ದು, ನ.14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ತಿಳಿದುಬಂದಿದೆ.