ಮಂಗಳೂರು, ಅ 22 (Daijiworld News/MSP): ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎಲ್ಲಾ 60 ವಾರ್ಡ್ಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಕೆದರಿದೆ.
ನವೆಂಬರ್ 12ರಂದು ಪಾಲಿಕೆ ಚುನಾವಣೆ ನಡೆಯಲಿದ್ದು ಈ ಹಿನ್ನಲೆಯಲ್ಲಿ ತಲಾ 12 ಮಂದಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.
ಪ್ರತಿಯೊಬ್ಬ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗೆ ತಲಾ ಐದು ವಾರ್ಡ್ಗಳ ಜವಾಬ್ದಾರಿಯನ್ನು ನೀಡಲಾಗಿದೆ. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿ ಈ ನೇಮಕಾತಿ ಮಾಡಿದ್ದಾರೆ. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಹೊಣೆ ನೀಡಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯು ಅ.24ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಅ.31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನ.4ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ನ.14ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ.