ಮಂಗಳೂರು, ಅ 24 (Daijiworld News/MSP): ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಅ.24ರ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.31 ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಇಂದಿನಿಂದ 12 ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆಯಿಂದಲೇ ನಾಮಪತ್ರಗಳನ್ನು ಸ್ವೀಕರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್ಗಳ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಪ್ರತಿ ಐದು ವಾರ್ಡ್ಗೆ ಒಬ್ಬರಂತೆ 12 ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳ ಮೇಲೆ ನಿಗಾ ಇಡಲು 12 ನೋಡೆಲ್ ಅಧಿಕಾರಿಗಳನ್ನೂ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.4 ಕೊನೆಯ ದಿನ. ನ.12ರಂದು ಮತದಾನ ನಡೆಯಲಿದೆ. ಮರು ಮತದಾನ ಅಗತ್ಯವಿದ್ದಲ್ಲಿ ನ.13ರಂದು ನಡೆಸಲಾಗುವುದು. ನ.14ರಂದು ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಲಾಗುವುದು ಎಂದು ವಿವರಿಸಿದರು. ಪಾಲಿಕೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ತಲಾ ರೂ. 3 ಲಕ್ಷದ ಚುನಾವಣಾ ವೆಚ್ಚದ ಮಿತಿಯನ್ನು ನಿಗದಿಗೊಳಿಸಲಾಗಿದೆ. ವೆಚ್ಚ ಪರಿಶೀಲನೆಗಾಗಿ ತಲಾ ಇಬ್ಬರು ಅಧಿಕಾರಿಗಳ ಮೂರು ತಂಡಗಳನ್ನು ನೇಮಕ ಮಾಡಲಾಗಿದೆ ಎಂದರು.