ಉಡುಪಿ, ಅ.25(Daijiworld News/SS): ಕರಾವಳಿ ಜಿಲ್ಲೆಯಲ್ಲಿ ತೀವ್ರ ಮಳೆಯ ಹಿನ್ನಲೆ, ಅ.25ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ - ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ರಾಜ್ಯದ ಕರಾವಳಿ ಭಾಗಕ್ಕೆ ಕ್ಯಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 25ರ ಶುಕ್ರವಾರದಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ಈ ಮಾರುತಗಳ ಹೊಡೆತ ಕರಾವಳಿಗೆ ತಟ್ಟಲಿದೆ ಎನ್ನಲಾಗಿದೆ. ಈಗಾಗಲೇ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಆಯಾ ಭಾಗದ ಜಿಲ್ಲಾಡಳಿತಗಳು ತೀವ್ರ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮತ್ತು ವಿಪತ್ತು ನಿರ್ವಹಣಾ ತಂಡವು ಸೂಚನೆ ನೀಡಿದೆ.