ಮಂಗಳೂರು, ಅ.25(Daijiworld News/SS): ಭಾರೀ ಮಳೆಯ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ರೆಡ್ ಅಲರ್ಟ್ ಸೂಚನೆ ನೀಡಿದೆ. ಸಾರ್ವಜನಿಕರು ಈ ಅವಧಿಯಲ್ಲಿ ಮುಂಜಾಗ್ರತಾ ಕ್ರಮ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಉಳ್ಳಾಲದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಬಿರುಸಿನಿಂದ ಅಪ್ಪಳಿಸುತ್ತಿದ್ದು, ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ ಸಮುದ್ರ ತೀರದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಉಚ್ಚಿಲದ ಬಟ್ಟಂಪ್ಪಾಡಿ ಸಮೀಪ ನಾಲ್ಕು ತೆಂಗಿನ ಮರಗಳು ಧರಾಶಾಹಿಯಾಗಿವೆ. ಬಲವಾದ ಗಾಳಿಯ ಪರಿಣಾಮವಾಗಿ ಕಡಲ್ಕೊರೆತ ಉಂಟಾಗಿ ಅಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ತಡೆಗೋಡೆ ಸಮುದ್ರಪಾಲಾಗುತ್ತಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಆಯಾ ಭಾಗದ ಜಿಲ್ಲಾಡಳಿತಗಳು ತೀವ್ರ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮತ್ತು ವಿಪತ್ತು ನಿರ್ವಹಣಾ ತಂಡವು ಸೂಚನೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ.