ಮಂಗಳೂರು, ನ. 01(DaijiworldNews/SM): ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಒಂದು ಪ್ರಕರಣದಲ್ಲಿ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿ ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಗಳಿಸಲು ಆರೋಪಿಗಳು ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ.
ದೇರಳಕಟ್ಟೆಯ ಮೊಹಮ್ಮದ್ ಹನೀಫ್(32) ಹಾಗೂ ಮೊಹಮ್ಮದ್ ಶಫೀಕ್(29) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 33,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಕ್ರಾಸ್ ಬಳಿ ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಶಿವಕುಮಾರ್ ಯಾನೆ ಶಿವು ಹಾಗೂ ಕುಮಾರ್ ಎಸ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ಸುಮಾರು ೨೪೦ ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.