ಮಂಗಳೂರು, ಡಿ 15 (DaijiworldNews/SM): ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ ಮಂಗಳೂರಿನ ವಿದ್ಯಾರ್ಥಿ ಸಂಘಟನೆ ಕ್ಯಾಂಪಸ್ ಫ್ರಂಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಂಗಳೂರಿನಲ್ಲೂ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಇಂದು ಸಂಜೆ ನಡೆದಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಸಿಎಫ್ ಐ ಸಂಘಟನೆಯ ಕಾರ್ಯಕರ್ತರು, ವಿದ್ಯಾರ್ಥಿಗಳು ಧಿಕ್ಕಾರ ಕೂಗುತ್ತಾ ಏಕಾಏಕಿ ನಗರದ ಜ್ಯೋತಿ ವೃತ್ತದ ಬಳಿ ಜ್ಯೋತಿ-ಬಲ್ಮಠ ರಸ್ತೆ ತಡೆದು ಸಂಚಾರಕ್ಕೆ ತಡೆಯೊಡ್ಡಲು ಮುಂದಾಗಿದ್ದರು.
ಈ ವೇಳೆ ಪೊಲೀಸರು ರಸ್ತೆಯನ್ನು ತೆರವುಗೊಳಿಸಲು ಸೂಚನೆ ನೀಡಿದರು. ಆದರೆ, ಪೊಲೀಸರ ಮನವಿಗೆ ಧರಣಿ ನಿರತರು ಕ್ಯಾರೇ ಅನ್ನದೆ ತಮ್ಮ ಧರಣಿ ಮುಂದುವರೆಸಿದರು. ಈ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದರು.
ಬಳಿಕ ಪ್ರತಿಭಟನಾಕಾರರನ್ನು ಪೊಲೀಸ್ ಸ್ಥಳದಿಂದ ತೆರವುಗೊಳಿಸಿ ಬಸ್ಸಿಗೆ ತುಂಬಿಸಿ ಕರೆದೊಯ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.