ಮಂಗಳೂರು, ಡಿ 19 (DaijiworldNews/SM): ಮಂಗಳೂರು ನಗರದಲ್ಲಿ ಗುರುವಾರದಂದು ನಡೆದ ಹಿಂಸಾಚಾರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮಂಗಳೂರಿನಲ್ಲಿ ಈ ಕಾಯ್ದೆಗೆ ಕೆಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಆದರೆ, ಇದನ್ನು ಉಲ್ಲಂಘಿಸಿ ಕೆಲವರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿತ್ತು. ಇದರಿಂದ ಮಂಗಳೂರಿನಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಎಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.