ಉಡುಪಿ, ಡಿ 20 (Daijiworld News/PY) : ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಶ್ರೀಗಳ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಶ್ರೀಗಳ ಆಪ್ತ ಕಾರ್ಯದರ್ಶಿ ಟಿ ಪಿ ಅನಂತ್ ಗೆ ಕರೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ರೀಗಳ ಆರೋಗ್ಯ ವಿಚಾರಿಸಿ, ಬೇಗನೇ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಶ್ರೀಗಳ ಆರೋಗ್ಯ ವಿಚಾರಿಸಲು ನಾಳೆ ಅಮಿತ್ ಶಾ ಅವರು ಉಡುಪಿಗೆ ಆಗಮಿಸಲಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಹ ಮಂಗಳೂರಿನಿಂದ ಉಡುಪಿಗೆ ತೆರಳಿ ಶ್ರೀಗಳನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಇಂದು ಮುಂಜಾನೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಆಂಟಿಬಯಾಟಿಕ್ ಮತ್ತು ಇತರ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.