ಮಂಗಳೂರು, ಡಿ 21 (Daijiworld News/PY) : ಪೌರತ್ವ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಮಂಗಳೂರಿನ ಸ್ಥಿತಿ ಈಗ ನಿಯಂತ್ರಣಕ್ಕೆ ಬರುತ್ತಿದ್ದು, ಅಹಿತಕರ ಘಟನೆಗಳು ಸಂಭವಿಸದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪ್ರಮುಖ ರಸ್ತೆಗಳಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಅಂಗಡಿಗಳು ತೆರೆದಿದ್ದು, ವಾಹಸ ಸಂಚಾರ ಪ್ರಾರಂಭಗೊಂಡಿದೆ. ಹೋಟೆಲ್ ಗಳತ್ತ ಜನರ ದಂಡು ಸಾಗುತ್ತಿರುವುದು ಕಂಡುಬಂದಿದ್ದು, ಸರ್ಕಾರಿ, ಖಾಸಗಿ ಬಸ್ಸುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ರವಿವಾರ ಮಧ್ಯರಾತ್ರಿಯವರೆಗೆ ಕಮಿಷನರೇಟ್ ಪ್ರದೇಶದ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಪಡೆಯನ್ನು ಆಯೋಜಿಸಲಾಗಿದೆ. ಸಂಚಾರ ವ್ಯವಸ್ಥೆಗೆ ನಿರ್ಬಂಧ ಹೇರಲಾಗಿದ್ದು, ಅಲ್ಲಲ್ಲಿ ಬ್ಯಾರಿಕೇಡ್ ಅಳವಡಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಆಗಮಿಸಲಿದ್ದು, ಸರ್ಕ್ಯೂಟ್ ಹೌಸ್ ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆಯ ವಿಚಾರವಾಗಿ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಕೂಡಾ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.